News

ಉಪ್ಪಳ: ಖಾಸಗಿ ಬಾಸ್ ಅಪಘಾತ, ವಿದ್ಯಾರ್ಥಿಗಳು ಸೇರಿ 20 ಮಂದಿಗೆ ಗಾಯ

ಉಪ್ಪಳ, ಡಿ 07(SM): ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ಸೊಂದು ಮನೆಯ ಆವರಣ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಸೋಂಕಾಲ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಉಪ್ಪಳದಿಂದ ಬಾಯಾರು ಮೂಲಕ ಪೆರ್ಲಕ್ಕೆ ತೆರಳುವ ಪಂಚಮಿ ಬಸ್ಸು ಸೋಂಕಾಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲದೆ ರಸ್ತೆ ಬದಿಯ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಉಪ್ಪಳ ಹಾಗೂ ಇತರ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಉಂಟಾಗಿದೆ.

ಸುದ್ದಿ ತಿಳಿದಾಕ್ಷಣ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು , ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸುವಲ್ಲಿ ನೆರವಾಗಿದ್ದಾರೆ.