News

ಮಂಗಳೂರು: ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡುವವರೇ ಎಚ್ಚರ, ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ವಾಹನ ಕಳ್ಳರು

ಮಂಗಳೂರು, ಮಾ 19(SM): ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರ ಸೆಕ್ರೆಡ್ ಹಾರ್ಟ್ ಶಾಲೆಯ ಮುಂಭಾಗದ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಅಪ್ ವಾಹನದ ಬ್ಯಾಟರಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಶಕ್ತಿನಗರದ ರಾಜೇಶ (31) ಹಾಗೂ ಬಿಕರ್ನಕಟ್ಟೆ ನಿವಾಸಿ ಪ್ರಕಾಶ (38) ಬಂಧಿತ ಆರೋಪಿಗಳು.

ಇನ್ನು ಬಂಧಿತ ಆರೋಪಿಗಳಿಂದ ಕಳವು ಮಾಡಿದ ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆರೋಪಿಗಳು ಪಿಕ್ ಅಪ್ ವಾಹನದ ಇಂಜಿನ್ ಗೆ ಉಪ್ಪನ್ನು ಹಾಕಿ ಸುಮಾರು 12,000 ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಈ ಬಗ್ಗೆ ಪಿಕಪ್ ಮಾಲಕ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಇದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಪ್ರಮುಖ ವಿಚಾರವೆಂದರೆ, ಇತ್ತೀಚಿನ ದಿನಗಳಲ್ಲಿ ರಸ್ತೆ ಪಕ್ಕದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ವಾಹನಗಳಿಂದ ಬ್ಯಾಟರಿ ಕಳವು ವಾಹನಗಳಿಗೆ ಹಾನಿ ಸೇರಿದಂತೆ ಮತ್ತಿತರ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಹಿಸಬೇಕಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಪಕ್ಕದಲ್ಲಿ ವಾಹನ ಪಾರ್ಕಿಂಗ್ ಮಾಡುವ ಸಂದರ್ಭ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತಹ ಅಗತ್ಯತೆ ಇದೆ.